ಸುಪ್ರೀಂ ಕೋರ್ಟ್ ತನ್ನ 2024ರ ಡಿಸೆಂಬರ್ 17ರ ಆದೇಶದಲ್ಲಿ ಅನಧಿಕೃತವಾಗಿ ಕಟ್ಟಡ ಹಾಗೂ ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆದೇಶ ಮಾಡಿದೆ. ಅದರಂತೆ ಬೆಂಗಳೂರಿನ ಬೆಸ್ಕಾಂ, ಮಂಗಳೂರು, ಹುಬ್ಬಳ್ಳಿ, ಮೈಸೂರಿನ ಚಾಮುಂಡೇಶ್ವರಿ, ಕಲಬುರಗಿ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸರಬರಾಜು ಸಹಕಾರ ಸೊಸೈಟಿ ಸೇರಿ ಆರು ಎಸ್ಕಾಂಗಳು ಒಸಿ ಪ್ರಮಾಣ ಪತ್ರ ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು.
ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಯಾವುದೇ ಕಾರಣಕ್ಕೂ ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಮಾಣವಾಗುತ್ತಿರುವ ಕಟ್ಟಡವನ್ನು ನಿರಂತರ ಪರಿಶೀಲನೆ ನಡೆಸಬೇಕು. ಯಾವುದೇ ನಕ್ಷೆ ಉಲ್ಲಂಘನೆ ಆಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡ ನಿರ್ಮಾಣ ಸ್ಥಳದಲ್ಲಿ ನಕ್ಷೆ ಮಂಜೂರಾತಿ ಪ್ರತಿಯೊಂದು ಪ್ರದರ್ಶಿಸಬೇಕು. ಕಟ್ಟಡ ನಿರ್ಮಾಣ ಪೂರ್ಣಗೊಂಡ ಬಳಿಕ ಸ್ಥಳ ಪರಿಶೀಲನೆ ನಡೆಸಿ ನಂತರ ಸ್ವಾಧೀನಾನುಭವ ಪತ್ರ ವಿತರಣೆ ಮಾಡಬೇಕು. ಒಂದೊಮ್ಮೆ ನಕ್ಷೆ ಮಂಜೂರಾತಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣವಾಗಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟವಾಗಿ ಸೂಚನೆ ನೀಡಿದೆ. ಜೊತೆಗೆ ಮುಖ್ಯವಾಗಿ 'ಒಸಿ' ವಿತರಣೆ ಬಳಿಕವಷ್ಟೇ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ, ಒಳಚರಂಡಿ ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದೆ.
0 Comments